ಕೋಸ್ಟಲ್ ಟಾಕ್ ನ್ಯೂಸ್ | ಮಂಗಳೂರು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026ರಲ್ಲಿ ಟಿಂಟೆಡ್ ಗ್ಲಾಸ್ ಅಳವಡಿಸಿದ ವಾಹನಗಳಿಂದ ₹75.88 ಲಕ್ಷ ದಂಡ ವಸೂಲಿ ಮಾಡಲಾಗಿದೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕುಮಾರ್, ಈ ಮಾಹಿತಿ ನೀಡಿದರು.

ರಾಷ್ಟ್ರೀಯ ಹೆದ್ದಾರಿ, ಲೋಕೋಪಯೋಗಿ ರಸ್ತೆ ಹಾಗೂ ಜಿಲ್ಲಾ ಮುಖ್ಯ ರಸ್ತೆಗಳಲ್ಲಿ ವೇಗ ನಿಯಂತ್ರಣ, ಟ್ರಾಫಿಕ್ ಸಿಗ್ನಲ್ ಮತ್ತು ಸೂಚನಾ ಫಲಕಗಳನ್ನು ಸಮರ್ಪಕವಾಗಿ ಅಳವಡಿಸಬೇಕು. ತಾತ್ಕಾಲಿಕ ಕ್ರಮಗಳ ಬದಲಿಗೆ ಶಾಶ್ವತ ಸುರಕ್ಷತಾ ವ್ಯವಸ್ಥೆ ರೂಪಿಸಬೇಕು. ರಾತ್ರಿ ವೇಳೆ ಬೆಳಕಿನ ಕೊರತೆಯಿಂದ ಅಪಘಾತಗಳು ಸಂಭವಿಸುತ್ತಿರುವುದರಿಂದ ಹೆದ್ದಾರಿಗಳಲ್ಲಿ ಬೀದಿದೀಪ ಅಳವಡಿಸುವಂತೆ ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯಲ್ಲಿ 42 ಪ್ರಮುಖ ಅಪಘಾತ ಸ್ಥಳಗಳನ್ನು ಗುರುತಿಸಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಹೆದ್ದಾರಿ ಇಲಾಖೆ ಅಧಿಕಾರಿಗಳು ತಿಳಿಸಿದರು.

2025-26 ಸಾಲಿನಲ್ಲಿ ಮದ್ಯಪಾನ ಮಾಡಿ ವಾಹನ ಚಲಾಯಿಸಿದ 2,604 ಪ್ರಕರಣಗಳು ದಾಖಲಾಗಿವೆ. ಕರ್ಕಶ ಹಾರ್ನ್ ಅಳವಡಿಸಿದ ವಾಹನಗಳ ವಿರುದ್ಧ 2,805 ಪ್ರಕರಣ ದಾಖಲಿಸಿ, 2026ರಲ್ಲಿ ₹8.38 ಲಕ್ಷ ದಂಡ ವಸೂಲಿ ಮಾಡಲಾಗಿದೆ.

ಶಾಲಾ ವಾಹನಗಳಲ್ಲಿ ಮಿತಿಮೀರಿ ಮಕ್ಕಳನ್ನು ಸಾಗಿಸಿದ 974 ಪ್ರಕರಣಗಳು ದಾಖಲಾಗಿವೆ.

ಮೀನು ಸಾಗಣೆ ವಾಹನಗಳಿಂದ ರಸ್ತೆ ಮೇಲೆ ತ್ಯಾಜ್ಯ ನೀರು ಚೆಲ್ಲಿದ ಪ್ರಕರಣಗಳಿಗೆ ಸಂಬಂಧಿಸಿ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ 2026 ರಲ್ಲಿ 535 ಪ್ರಕರಣ ದಾಖಲಿಸಿ ₹2.65 ಲಕ್ಷ ದಂಡ ವಸೂಲಿ ಮಾಡಲಾಗಿದೆ.