ಕೋಸ್ಟಲ್ ಟಾಕ್ ನ್ಯೂಸ್ | ಬಂಟ್ವಾಳ 

ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್‌ನಲ್ಲಿ ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಫ್ಲೈಓವರ್ ಮೇಲೆ ಎರಡು ದ್ವಿಚಕ್ರ ವಾಹನಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಸುಮಾರು 40 ಅಡಿ ಎತ್ತರದಿಂದ ಕೆಳಗಿನ ಸರ್ವಿಸ್ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆ ನವೆಂಬರ್ 10ರಂದು ಮಧ್ಯಾಹ್ನ ನಡೆದಿದೆ. 

ದಿಯಾ ಕೊಠಾರಿ ಎಂಬವರು ದ್ವಿಚಕ್ರ ವಾಹನದಲ್ಲಿ ಮಂಗಳೂರು ಕಡೆಗೆ ಅಜಾಗರೂಕತೆ ಹಾಗೂ ನಿರ್ಲಕ್ಷ್ಯದಿಂದ ಸವಾರಿ ಮಾಡಿಕೊಂಡು ಹೋಗುತ್ತಿದ್ದಾಗ, ಅವ್ನೀಲ್ ಸಾವಿಯೋ ಡಿಸೋಜ ಅವರು ಚಲಾಯಿಸುತ್ತಿದ್ದ ಬೈಕ್‌ನ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದ್ದಾರೆ ಎನ್ನಲಾಗಿದೆ. ಡಿಕ್ಕಿಯ ಪರಿಣಾಮ ಅವ್ನೀಲ್ ಸಾವಿಯೋ ಡಿಸೋಜ ಅವರು ಫ್ಲೈಓವರ್ ಮೇಲಿಂದ ಸುಮಾರು 40 ಅಡಿ ಕೆಳಗಿರುವ ಸರ್ವಿಸ್ ರಸ್ತೆಗೆ ಬಿದ್ದಿದ್ದಾರೆ. ಇದರಿಂದ ಅವರ ಎದೆ, ಎಡ ಭುಜ, ಹೊಟ್ಟೆ, ಬೆನ್ನು ಹಾಗೂ ಸೊಂಟಕ್ಕೆ ಗಾಯಗಳಾಗಿವೆ. ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪಘಾತಕ್ಕೆ ಕಾರಣವಾದ ಬೈಕ್ ಸವಾರರಾದ ದಿಯಾ ಕೊಠಾರಿ ಅವರಿಗೆ ಯಾವುದೇ ಗಾಯಗಳಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.