ಕೋಸ್ಟಲ್ ಟಾಕ್ ನ್ಯೂಸ್ | ಕಾರವಾರ
ಕಾರವಾರದ ಬಸ್ ನಿಲ್ದಾಣದಲ್ಲಿ ಮಹಿಳೆಯರ ಸುರಕ್ಷತೆಗೆ ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳುವಂತೆ ಮತ್ತು ಮಹಿಳಾ ಪ್ರಯಾಣಿಕರು ಸೇರಿದಂತೆ ಎಲ್ಲಾ ಸಾರ್ವಜನಿಕರಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ನಿರ್ದೇಶನ ನೀಡಿದರು.
ಅವರು ಭಾನುವಾರ ಕಾರವಾರ ಬಸ್ ನಿಲ್ದಾಣಕ್ಕೆ ಭೇಟಿ ನೀಡಿ, ಪರಿಶೀಲನೆ ನಡಸಿ ಮಾತನಾಡಿದರು.
ಬಸ್ ನಿಲ್ದಾಣದಲ್ಲಿ ಮಹಿಳಾ ಮತ್ತು ಮಕ್ಕಳ ಸುರಕ್ಷತೆಗೆ ಸಂಬಂಧಪಟ್ಟ ಸಹಾಯವಾಣಿ ಸಂಖ್ಯೆಗಳನ್ನು ಅತ್ಯಂತ ಸ್ಪಷ್ಠವಾಗಿ ಕಾಣುವಂತೆ ಬರೆಸಬೇಕು. ಬಸ್ ನಿಲ್ದಾಣದಲ್ಲಿನ ಶೌಚಾಲಯದಲ್ಲಿ ಮೂತ್ರ ವಿಸರ್ಜನೆಗೂ ಶುಲ್ಕ ಪಡೆಯುತ್ತಿರುವ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಅವರು ಸರ್ಕಾರ ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಅವಕಾಶ ನೀಡಿದ್ದರೂ, ಆದರೆ ಶೌಚಾಲಯದಲ್ಲಿ ಮಹಿಳೆಯರಿಗೆ ಕಾನೂನುಬಾಹಿರವಾಗಿ ಶುಲ್ಕ ವಿಧಿಸುತ್ತಿರುವ ಬಗ್ಗೆ ಮತ್ತು ಬಸ್ ಸ್ಟ್ಯಾಂಡ್ನ್ನು ಸುಮಾರು 23 ವರ್ಷಗಳಿಂದ ಸ್ವಚ್ಛಗೊಳಿಸುತ್ತಿರುವ ಮಹಿಳೆಗೆ ಅತ್ಯಂತ ಕನಿಷ್ಠ ವೇತನ ನೀಡುತ್ತಿರುವ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ಕಾರ್ಮಿಕ ಇಲಾಖೆಗಳ ನಿಯಮಗಳ ಪ್ರಕಾರ ಸ್ವಚ್ಚತಾ ಸಿಬ್ಬಂದಿಗೆ ವೇತನ ನೀಡುವಂತೆ ಸೂಚಿಸಿದ ಅವರು ಇದುವರೆಗೆ ಕನಿಷ್ಠ ವೇತನವನ್ನು ನೀಡದೇ, ಸಿಬ್ಬಂದಿಗಳ ಸೇವೆಗೆ ಟೆಂಡರ್ ಪಡೆದಿರುವ ಸಂಸ್ಥೆಯ ವಿರುದ್ದ ಸೂಕ್ತ ಕ್ರಮ ಕೈಗೊಳ್ಳುವಂತೆ ಸಂಬ೦ಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬಸ್ ನಿಲ್ದಾಣದಲ್ಲಿನ ಶುದ್ದ ಕುಡಿಯುವ ನೀರಿನ ಘಟಕ ಹಾಳಾಗಿದ್ದರೂ ಇದುವರೆಗೆ ದುರಸ್ತಿಗೆ ಕ್ರಮ ಕೈಗೊಳ್ಳದ ಬಗ್ಗೆ ಸಂಬಂಧಪಟ್ಟವರ ವಿರುದ್ದ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ ಅವರು, ಬಸ್ ನಿಲ್ದಾಣದಲ್ಲಿನ ಸಿಸಿಟಿವಿ ಸಂಖ್ಯೆಗಳನ್ನು ಹೆಚ್ಚು ಮಾಡುವಂತೆ ಮತ್ತು ಸಿಸಿಟಿವಿ ದೃಶ್ಯಾವಳಿಗಳ ಬ್ಯಾಕ್ ಅಪ್ ಅವಧಿಯನ್ನು ಹೆಚ್ಚು ಮಾಡಲು ಕ್ರಮ ಕೈಗೊಳ್ಳಬೇಕು, ಮಹಿಳಾ ವಿಶ್ರಾಂತಿ ಗೃಹದಲ್ಲಿ ಸ್ವಚ್ಛತೆ ಕಾಪಾಡಬೇಕು ಮತ್ತು ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಸೂಚನೆ ನೀಡಿದರು.