ಕೋಸ್ಟಲ್ ಟಾಕ್ ನ್ಯೂಸ್ | ಮಂಗಳೂರು

ಮಂಗಳೂರಿನ ಕನಚೂರು ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳ ಅಪಹರಣಕ್ಕೆ ಸಂಬಂಧಿಸಿದಂತೆ ಮಂಗಳೂರು ನಗರ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಗುರುವಾರ ಸಂಜೆ ಈ ಘಟನೆ ನಡೆದಿದೆ.

ಕೆಲವು ವ್ಯಕ್ತಿಗಳು ವಿದ್ಯಾರ್ಥಿನಿಯನ್ನು ಬಲವಂತವಾಗಿ ಕರೆದೊಯ್ಯುತ್ತಿರುವ ದೃಶ್ಯಾವಳಿಯ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬಳಿಕ ಘಟನೆ ಬೆಳಕಿಗೆ ಬಂದಿದೆ. ವಿದ್ಯಾರ್ಥಿನಿಯ ಕುಟುಂಬದ ಸದಸ್ಯರೇ ಆಕೆಯನ್ನು ಬಲವಂತವಾಗಿ ಕರೆದೊಯ್ದಿದ್ದಾರೆ ಎಂದು ಆರೋಪಿಸಲಾಗಿದೆ.

ವಿದ್ಯಾರ್ಥಿನಿ ಪ್ರಾಪ್ತ ವಯಸ್ಕಳಾಗಿದ್ದು, ಎಲ್ಲಿ ಇರಬೇಕು ಎಂಬುದನ್ನು ನಿರ್ಧರಿಸುವ ಕಾನೂನುಬದ್ಧ ಹಕ್ಕು ಆಕೆಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಶುಕ್ರವಾರ ತಿಳಿಸಿದ್ದಾರೆ. ಆಕೆಯ ಇಚ್ಛೆಗೆ ವಿರುದ್ಧವಾಗಿ ಬಲವಂತವಾಗಿ ಕರೆದೊಯ್ಯುವುದು ಅಪರಾಧವಾಗುತ್ತದೆ ಎಂದರು. ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ ಉಲ್ಲೇಖಿಸಿರುವಂತೆ ವಿದ್ಯಾರ್ಥಿನಿ ಹಿಂದೂ ಯುವಕನೊಂದಿಗೆ ಪ್ರೀತಿಯಲ್ಲಿರುವಂತೆ ಕಂಡುಬರುತ್ತದೆ. ಪ್ರಕರಣ ದಾಖಲಿಸಿ, ತನಿಖೆ ನಡೆಸಿ ವಿದ್ಯಾರ್ಥಿನಿಯನ್ನು ಪತ್ತೆಹಚ್ಚುವಂತೆ ಸೂಚನೆ ನೀಡಲಾಗಿದೆ. ಘಟನೆ ನಡೆದ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದರೆ, ಅಪಹರಣಕಾರರ ವಾಹನ ದೂರ ಸಾಗುವ ಮುನ್ನವೇ ತಡೆಯಬಹುದಿತ್ತು ಎಂದು ಅವರು ಹೇಳಿದರು.