ಕೋಸ್ಟಲ್ ಟಾಕ್ ನ್ಯೂಸ್ | ಮಂಗಳೂರು
ಮಂಗಳೂರು ನಗರದಲ್ಲಿ ಸಂಚಾರ ನಿಯಮ ಉಲ್ಲಂಘನೆಗೆ ಸಂಬಂಧಿಸಿದ ಇ-ಚಲನ್ ದಂಡ ಪಾವತಿಸುವಂತೆ ನಂಬಿಸಿ ಸೈಬರ್ ವಂಚಕರು ಸಾರ್ವಜನಿಕರ ಮೊಬೈಲ್‌ಗಳಿಗೆ ನಕಲಿ ಲಿಂಕ್‌ಗಳು ಮತ್ತು ಎಪಿಕೆ ಫೈಲ್‌ಗಳನ್ನು ಕಳುಹಿಸುತ್ತಿದ್ದಾರೆ. ಇಂತಹ ಸಂದೇಶಗಳ ಮೂಲಕ ಸಾರ್ವಜನಿಕರನ್ನು ವಂಚಿಸಲಾಗುತ್ತಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಶುಕ್ರವಾರ ತಿಳಿಸಿದ್ದಾರೆ.
ಈ ವರ್ಷ ಮಂಗಳೂರು ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ಇಂತಹ ಸೈಬರ್ ವಂಚನೆಗೆ ಸಂಬಂಧಿಸಿದಂತೆ ಒಟ್ಟು ಎಂಟು ಪ್ರಕರಣಗಳು ದಾಖಲಾಗಿವೆ. ಈ ಪ್ರಕರಣಗಳಲ್ಲಿ ಸಂತ್ರಸ್ತರು ಒಟ್ಟಾರೆಯಾಗಿ ₹44 ಲಕ್ಷ ಕಳೆದುಕೊಂಡಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಸಾರ್ವಜನಿಕರು ಇಂತಹ ವಂಚನೆಗಳ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂದು ಪೊಲೀಸ್ ಆಯುಕ್ತರು ಸಲಹೆ ನೀಡಿದ್ದಾರೆ. ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಸುವ ಮೊದಲು ತಮ್ಮ ವಾಹನದ ವಿರುದ್ಧ ನಿಜವಾಗಿಯೂ ಪ್ರಕರಣ ದಾಖಲಾಗಿದೆಯೇ ಎಂಬುದನ್ನು ಅಧಿಕೃತ ಇ-ಚಲನ್ ವೆಬ್‌ಸೈಟ್ ಮೂಲಕ ಪರಿಶೀಲಿಸಬೇಕು ಎಂದು ಸೂಚಿಸಿದ್ದಾರೆ.
ಸೈಬರ್ ವಂಚನೆಗೆ ಬಲಿಯಾಗುವುದನ್ನು ತಪ್ಪಿಸಲು ಮುನ್ನೆಚ್ಚರಿಕೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಮೊಬೈಲ್‌ಗೆ ಬರುವ ಇ-ಚಲನ್ ದಂಡ ಪಾವತಿ ಸಂದೇಶಗಳ ಬಗ್ಗೆ ಅನುಮಾನವಿದ್ದಲ್ಲಿ ಪರಿಶೀಲನೆಗಾಗಿ ಮಂಗಳೂರು ನಗರ ಪೊಲೀಸರನ್ನು 0824-2220823 ಸಂಖ್ಯೆಯಲ್ಲಿ ಸಂಪರ್ಕಿಸಬಹುದು ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.