ಎಸ್‌ಐಆರ್‌ ವಿರುದ್ಧ ಉಡುಪಿ ಕಾಂಗ್ರೆಸ್ ಪ್ರತಿಭಟನೆ; ಸಿಇಸಿ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ 

ಕೋಸ್ಟಲ್ ಟಾಕ್ ನ್ಯೂಸ್ | ಉಡುಪಿ 

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆ ಹಾಗೂ ಬಂಧನಕ್ಕೆ ಆಗ್ರಹಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಸೋಮವಾರ ಮಣಿಪಾಲದ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು. 

ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲು, ಸಂವಿಧಾನಕ್ಕೆ ವಿರುದ್ಧವಾದ ಕ್ರಮಗಳನ್ನು ಕೈಗೊಂಡಿರುವ ಆರೋಪದ ಹಿನ್ನೆಲೆಯಲ್ಲಿ ಜ್ಞಾನೇಶ್ ಕುಮಾರ್ ಅವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು. ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ. ಗಫೂರ್ ಮಾತನಾಡಿ, ಮಾಜಿ ಮುಖ್ಯ ಚುನಾವಣಾ ಆಯುಕ್ತ ಟಿ.ಎನ್. ಶೇಷನ್ ಅವರು ಮಾದರಿಯಾಗಿದ್ದರು. ಆದರೆ ಪ್ರಸ್ತುತ ಜ್ಞಾನೇಶ್ ಕುಮಾರ್ ನೇತೃತ್ವದ ಚುನಾವಣಾ ಆಯೋಗದ ಕಾರ್ಯವೈಖರಿ ಸಂವಿಧಾನದ ಆಶಯಗಳನ್ನು ದುರ್ಬಲಗೊಳಿಸಿದೆ ಎಂದು ಆರೋಪಿಸಿದರು. ಎಸ್‌ಐಆರ್‌ ಪ್ರಕ್ರಿಯೆಯಲ್ಲಿ 13 ಕೋಟಿಗೂ ಅಧಿಕ ಮತದಾರರ ಹೆಸರುಗಳನ್ನು ಅಳಿಸಿರುವುದು ಆತಂಕಕಾರಿ ಎಂದು ಗಫೂರ್ ಹೇಳಿದರು. ಕಾಂಗ್ರೆಸ್ ಮುಖಂಡೆ ವೆರೋನಿಕಾ ಕಾರ್ನೆಲಿಯೊ ಮಾತನಾಡಿ, ಸಿಇಸಿ ಯದ್ದು ಸರ್ವಾಧಿಕಾರಿ ಧೋರಣೆ ಎಂದ ಅವರು, ಈ ಕ್ರಮಗಳನ್ನು ಯುವಜನರು ಪ್ರಶ್ನಿಸುತ್ತಿದ್ದಾರೆ ಎಂದರು. ವಿವಿಧ ರಾಜ್ಯಗಳಲ್ಲಿ ಎಸ್‌ಐಆರ್‌ ವೇಳೆ ಆರ್ಥಿಕವಾಗಿ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ಸಮುದಾಯಗಳ ಮತದಾರರನ್ನು ಗುರಿಯಾಗಿಸಲಾಗಿದೆ ಎಂದು ಅವರು ಆರೋಪಿಸಿದರು. 

ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡರಾದ ಗೋಪಾಲ್ ಪೂಜಾರಿ, ಅಶೋಕ್ ಕುಮಾರ್ ಕೊಡವೂರು, ಪ್ರಸಾದ್‌ರಾಜ್ ಕಾಂಚನ್, ರಾಜು ಪೂಜಾರಿ, ಹರೀಶ್ ಕಿಣಿ, ರಮೇಶ್ ಕಾಂಚನ್, ದಿನೇಶ್ ಪುತ್ರನ್, ಬಿ. ನರಸಿಂಹಮೂರ್ತಿ, ಭಾಸ್ಕರ್ ರಾವ್ ಕಿದಿಯೂರು, ಕುಶಲ್ ಶೆಟ್ಟಿ, ದಿನೇಶ್ ಹೆಗ್ಡೆ ಹಾಗೂ ಹರಿಪ್ರಸಾದ್ ರೈ ಸೇರಿದಂತೆ ಹಲವರು ಭಾಗವಹಿಸಿದ್ದರು. ಬಳಿಕ ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು, ಪೊಲೀಸರು ಅವರನ್ನು ತಡೆದರು.