ಕೋಸ್ಟಲ್ ಟಾಕ್ ನ್ಯೂಸ್ | ನವದೆಹಲಿ
ಪ್ರಧಾನಮಂತ್ರಿ ಉದ್ಯೋಗ ಸೃಜನ ಕಾರ್ಯಕ್ರಮದ (ಪಿಎಂಇಜಿಪಿ) ಅಡಿಯಲ್ಲಿ ₹1,000 ಕೋಟಿ ಮಾರ್ಜಿನ್ ಮನಿ ಸಬ್ಸಿಡಿ ಬಿಡುಗಡೆ ಮಾಡುವ ಕಾರ್ಯಕ್ರಮ ಬುಧವಾರ ನವದೆಹಲಿಯಲ್ಲಿ ನಡೆಯಿತು. ಕೇಂದ್ರ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಚಿವ ಜಿತನ್ ರಾಮ್ ಮಾಂಝಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಕೇಂದ್ರ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳು ಹಾಗೂ ಕಾರ್ಮಿಕ ಮತ್ತು ಉದ್ಯೋಗ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಉಪಸ್ಥಿತರಿದ್ದರು.
ಈ ಸಬ್ಸಿಡಿಯಿಂದ ಸುಮಾರು 11,333 ಹೊಸ ಉದ್ಯಮಗಳ ಸ್ಥಾಪನೆಗೆ ನೆರವಾಗುವ ನಿರೀಕ್ಷೆಯಿದೆ. ಇದರ ಮೂಲಕ ಒಂದು ಲಕ್ಷಕ್ಕೂ ಹೆಚ್ಚು ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ ಎಂದು ತಿಳಿಸಲಾಗಿದೆ. ಉದ್ಯಮಶೀಲತೆಯನ್ನು ಉತ್ತೇಜಿಸುವುದು, ಗ್ರಾಮೀಣ ಪ್ರದೇಶಗಳಲ್ಲಿ ಸೂಕ್ಷ್ಮ ಕೈಗಾರಿಕೆಗಳ ಬೆಳವಣಿಗೆಗೆ ನೆರವಾಗುವುದು ಹಾಗೂ ಎಲ್ಲರನ್ನೂ ಒಳಗೊಳ್ಳುವ ಆರ್ಥಿಕ ಅಭಿವೃದ್ಧಿಗೆ ಉತ್ತೇಜನ ನೀಡುವುದು ಈ ಉಪಕ್ರಮದ ಉದ್ದೇಶವಾಗಿದೆ. ಹೊಸ ಉದ್ಯಮಗಳನ್ನು ಆರಂಭಿಸಲು ಬಯಸುವವರಿಗೆ ಆರ್ಥಿಕ ನೆರವು ಒದಗಿಸುವ ಮೂಲಕ ಸುಸ್ಥಿರ ಜೀವನೋಪಾಯದ ಅವಕಾಶಗಳನ್ನು ಸೃಷ್ಟಿಸುವುದು ಹಾಗೂ ಉದ್ಯೋಗಾವಕಾಶಗಳನ್ನು ಹೆಚ್ಚಿಸುವುದು ಕೇಂದ್ರ ಸರ್ಕಾರದ ಈ ಯೋಜನೆಯ ಪ್ರಮುಖ ಉದ್ದೇಶವಾಗಿದೆ.