ಕೋಸ್ಟಲ್ ಟಾಕ್ ನ್ಯೂಸ್ | ಮಂಗಳೂರು
ಮಂಗಳೂರು ನಗರದಲ್ಲಿ ಯುವಕರು ಮತ್ತು ವಿದ್ಯಾರ್ಥಿಗಳಿಗೆ ಮಾದಕ ವಸ್ತು ಪೂರೈಸುತ್ತಿದ್ದ ಆರೋಪದಡಿ 42 ವರ್ಷದ ಮಹಿಳೆಯೊಬ್ಬರನ್ನು ಮಂಗಳೂರು ಉತ್ತರ ಪೊಲೀಸರು ಬಂಧಿಸಿದ್ದಾರೆ. ಬಂಧಿತೆಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಲಾಯಿಲ ನಿವಾಸಿ ನಸೀಮಾ (42) ಎಂದು ಗುರುತಿಸಲಾಗಿದೆ.
ನವೆಂಬರ್ 1ರಂದು ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ದಾಖಲಾದ ಮಾದಕ ವಸ್ತು ಸೇವನೆ ಪ್ರಕರಣದ ತನಿಖೆ ವೇಳೆ ಆರೋಪಿಗಳಿಗೆ ಮಾದಕ ವಸ್ತು ಪೂರೈಸುತ್ತಿದ್ದ ನಸೀಮಾ ಬಗ್ಗೆ ಪೊಲೀಸರಿಗೆ ಮಾಹಿತಿ ಲಭಿಸಿತ್ತು. ಈ ಹಿನ್ನೆಲೆಯಲ್ಲಿ ಪೂರೈಕೆ ಜಾಲದ ಬಗ್ಗೆ ತನಿಖೆ ಕೈಗೊಂಡ ಪೊಲೀಸರು, ಪಂಪ್ವೆಲ್ನ ಉಜ್ಜೋಡಿ ಸಮೀಪದ ರಾಧಾ ರೆಸಿಡೆನ್ಸಿ ಅಪಾರ್ಟ್ಮೆಂಟ್ನ ಮೊದಲ ಮಹಡಿಯಲ್ಲಿರುವ ಫ್ಲ್ಯಾಟ್ ನಂ. 103 ರಲ್ಲಿ ಶೋಧ ನಡೆಸಿದರು. ಈ ವೇಳೆ ಸುಮಾರು ₹15.30 ಲಕ್ಷ ಮೌಲ್ಯದ 153 ಗ್ರಾಂ ಎಂಡಿಎಂಎ ಮಾದಕ ವಸ್ತುವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಿಚಾರಣೆ ವೇಳೆ ಆರೋಪಿತೆಯು ಮಂಗಳೂರು ನಗರದಾದ್ಯಂತ ಯುವಕರು ಮತ್ತು ವಿದ್ಯಾರ್ಥಿಗಳಿಗೆ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಸಂಗತಿ ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿತೆಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಪ್ರಕರಣದಲ್ಲಿ ಇನ್ನೂ ಕೆಲವು ಆರೋಪಿಗಳು ಭಾಗಿಯಾಗಿರುವ ಶಂಕೆಯಿದ್ದು, ಅವರ ಬಂಧನಕ್ಕೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.