ಮಂಗಳೂರು ಪೊಲೀಸರಿಂದ ದೆಹಲಿ ಮೂಲದ ಇಬ್ಬರು ಕುಖ್ಯಾತ ಮನೆಗಳ್ಳರ ಬಂಧನ 

ಕೋಸ್ಟಲ್ ಟಾಕ್ ನ್ಯೂಸ್ | ಮಂಗಳೂರು 

ದೆಹಲಿ ಮೂಲದ ಕುಖ್ಯಾತ ಮನೆಗಳ್ಳರಾದ ಅರ್ಮಾನ್ ಖಾನ್ (34), ಗೋಕುಲ್ ಪುರಿ, ಈಶಾನ್ಯ ದೆಹಲಿ ಹಾಗೂ ಸಂಜೀವ್ ಕುಮಾರ್ (34), ಸುಲ್ತಾನ್ ಪುರಿ, ನವದೆಹಲಿ ಅವರನ್ನು ಮಂಗಳೂರು ಪೊಲೀಸರು ಬಂಧಿಸಿದ್ದು, ಆರೋಪಿಗಳಿಂದ ಸುಮಾರು ರೂ.18 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿದಂತೆ ಕಳವು ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. 

ಸೆಪ್ಟೆಂಬರ್ 28ರಂದು ಮಧ್ಯಾಹ್ನ ಸುಮಾರು 3 ಗಂಟೆಗೆ ಮಂಗಳೂರು ನಗರದ ಅಳಕೆ ಕಂಬ್ಲ ಕ್ರಾಸ್ ರಸ್ತೆಯಲ್ಲಿರುವ ಸಹಯೋಗ ರೆಸಿಡೆನ್ಸಿ ಕಾಂಪ್ಲೆಕ್ಸ್‌ನ ಮನೆಯೊಂದಕ್ಕೆ ಬೀಗ ಹಾಕಿಕೊಂಡು ಮನೆಯವರು ಮಾರುಕಟ್ಟೆಗೆ ತೆರಳಿದ್ದರು. ಸಂಜೆ ಸುಮಾರು 5.10ಕ್ಕೆ ಮನೆಗೆ ಹಿಂದಿರುಗಿದಾಗ ಮುಂಭಾಗದ ಬಾಗಿಲಿನ ಕೊಂಡಿ ಮುರಿದು ಒಳನುಗ್ಗಿದ್ದ ಕಳ್ಳರು ಸುಮಾರು ರೂ.14 ಲಕ್ಷ ಮೌಲ್ಯದ ಚಿನ್ನಾಭರಣ, ನಗದು, ವಾಚ್ ಹಾಗೂ ಟ್ರಾಲಿ ಬ್ಯಾಗ್ ಸೇರಿದಂತೆ ಸೊತ್ತುಗಳನ್ನು ಕಳವು ಮಾಡಿಕೊಂಡು ಹೋಗಿರುವುದು ಪತ್ತೆಯಾಗಿತ್ತು. ಈ ಬಗ್ಗೆ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 331(3) ಹಾಗೂ 305ರಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿತ್ತು. 

ಇದೇ ರೀತಿ, ಸೆಪ್ಟೆಂಬರ್ 27ರಂದು ಹಗಲು ವೇಳೆಯಲ್ಲಿ ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯ ಬೊಕ್ಕಪಟ್ಣ ರಸ್ತೆಯ ಮನೆಯೊಂದಕ್ಕೆ ನುಗ್ಗಿದ್ದ ಆರೋಪಿಗಳು ಲಾಕರ್ ಒಡೆದು ಕಳವು ಮಾಡಲು ಯತ್ನಿಸಿದ್ದರು. ಆದರೆ ಮನೆಯಲ್ಲಿ ಯಾವುದೇ ಬೆಲೆಬಾಳುವ ವಸ್ತುಗಳು ದೊರೆಯದ ಹಿನ್ನೆಲೆಯಲ್ಲಿ ಚೆಕ್ ಪುಸ್ತಕಗಳನ್ನು ಕಳವು ಮಾಡಿಕೊಂಡು ಹೋಗಿದ್ದರು. ಈ ಕುರಿತು ಬರ್ಕೆ ಪೊಲೀಸ್ ಠಾಣೆಯಲ್ಲೂ BNS ಕಲಂ 331(3) ಹಾಗೂ 305ರಡಿ ಪ್ರಕರಣ ದಾಖಲಾಗಿತ್ತು.

 ಎರಡೂ ಪ್ರಕರಣಗಳ ತನಿಖೆಯನ್ನು ಕೇಂದ್ರ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತರ ಮಾರ್ಗದರ್ಶನದಲ್ಲಿ ವಿಶೇಷ ತಂಡ ಕೈಗೊಂಡಿತ್ತು. ಆರೋಪಿಗಳ ಚಲನವಲನದ ಕುರಿತು ಮಾಹಿತಿ ಸಂಗ್ರಹಿಸಿದಾಗ, ಮನೆಗಳ್ಳತನ ನಡೆಸಿದ ಬಳಿಕ ಅವರು ರೈಲಿನಲ್ಲಿ ದೆಹಲಿ ಕಡೆಗೆ ತೆರಳುತ್ತಿರುವುದು ಪೊಲೀಸರಿಗೆ ತಿಳಿದುಬಂದಿದೆ. ಕೂಡಲೇ ಗುಜರಾತ್‌ನ ವಡೋದರಾ ಪೊಲೀಸರ ಸಹಕಾರ ಪಡೆಯಲಾಯಿತು. ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಪೊಲೀಸ್ ತಂಡವು ಪ್ರಕರಣ ದಾಖಲಾದ 24 ಗಂಟೆಗಳೊಳಗೆ, ಸೆಪ್ಟೆಂಬರ್ 29ರಂದು ವಡೋದರಾದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಆರೋಪಿಗಳಿಂದ ಕಳವು ಮಾಡಲಾಗಿದ್ದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಅವುಗಳ ಒಟ್ಟು ಮೌಲ್ಯ ಸುಮಾರು ರೂ.18 ಲಕ್ಷ ಎಂದು ಅಂದಾಜಿಸಲಾಗಿದೆ. 

ಆರೋಪಿಗಳನ್ನು ವಡೋದರಾದಿಂದ ಮಂಗಳೂರಿಗೆ ಕರೆತಂದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಹೆಚ್ಚಿನ ತನಿಖೆಗಾಗಿ ಆರೋಪಿಗಳನ್ನು ಪೊಲೀಸ್ ವಶಕ್ಕೆ ಪಡೆದು ತನಿಖೆ ಮುಂದುವರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. 

ಬಂಧಿತ ಆರೋಪಿಗಳ ಪೈಕಿ ಅರ್ಮಾನ್ ಖಾನ್ ವಿರುದ್ಧ ದೆಹಲಿ, ಮುಂಬೈ, ಬೆಂಗಳೂರು, ಗೋವಾ ಹಾಗೂ ಹೈದರಾಬಾದ್ ಸೇರಿದಂತೆ ದೇಶದ ವಿವಿಧ ನಗರಗಳಲ್ಲಿ 40ಕ್ಕೂ ಅಧಿಕ ಮನೆಗಳ್ಳತನ ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.