ಕೋಸ್ಟಲ್ ಟಾಕ್ ನ್ಯೂಸ್ | ಉಡುಪಿ
ಜಿಲ್ಲೆಯಲ್ಲಿ ಹೊಸ ಕೈಗಾರಿಕಾ ಉದ್ಯಮಗಳನ್ನು ಸ್ಥಾಪಿಸಲು ಉದ್ಯಮಿಗಳು ಮುಂದೆ ಬರುತ್ತಿದ್ದಾರೆ. ಅವರುಗಳಿಗೆ ಕೈಗಾರಿಕಾ ಪ್ರದೇಶದಲ್ಲಿ ನಿವೇಶನ ಸೇರಿದಂತೆ ಮತ್ತಿತರ ಅಗತ್ಯ ಮೂಲಭೂತ ಸೌಕರ್ಯಗಳು, ಸಲಹೆಗಳನ್ನು ನೀಡಿ, ಉದ್ಯೋಗ ಅವಕಾಶಗಳು ಹೆಚ್ಚಿಸುವಂತೆ ನೋಡಿಕೊಳ್ಳಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ ನೀಡಿದರು.
ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿ ಸಭೆ ಹಾಗೂ ಕೈಗಾರಿಕಾ ಸ್ಪಂದನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.
ಹೆಬ್ರಿ ತಾಲೂಕಿನ ಶಿವಪುರದಲ್ಲಿ 74.84 ಎಕ್ರೆ, ಕೆರೆಬೆಟ್ಟುವಿನಲ್ಲಿ 38.75 ಎಕ್ರೆ, ಕಾರ್ಕಳದ ನಿಟ್ಟೆಯಲ್ಲಿ 50.42 ಎಕ್ರೆ ಹಾಗೂ ಬ್ರಹ್ಮಾವರ ತಾಲೂಕಿನ ಉಪ್ಪೂರು 101.19 ಎಕ್ರೆ ಪ್ರದೇಶದಲ್ಲಿ ಹೊಸ ಕೈಗಾರಿಕಾ ಪ್ರದೇಶ ನಿರ್ಮಾಣ ಮಾಡಲು ಭೂ ಸ್ವಾಧೀನ ಸೇರಿದಂತೆ ಮತ್ತಿತರ ಪ್ರಕ್ರಿಯೆಗಳನ್ನು ಶೀಘ್ರದಲ್ಲಿಯೇ ಪೂರ್ಣಗೊಳಿಸಿ, ಕೈಗಾರಿಕೆಗಳ ಸ್ಥಾಪನೆಗೆ ಮುಂದಾಗಬೇಕು ಎಂದರು.
ಜಿಲ್ಲೆಯಲ್ಲಿ ಕೈಗಾರಿಕಾ ಘಟಕ ಸ್ಥಾಪನೆಗೆ ನಿವೇಶನ ಹಂಚಿಕೆಯನ್ನು ಮಾಡಿದ್ದರೂ ಸಹ ಕಳೆದ ಸಭೆಯಲ್ಲಿ 17 ನಿವೇಶನಗಳಲ್ಲಿ ಉದ್ದಿಮೆ ಪ್ರಾರಂಭಿಸಲು ಉದ್ದಿಮೆದಾರರಿಗೆ ಸೂಚಿಸಲಾಗಿತ್ತು. ಅವುಗಳಲ್ಲಿ 5 ಪೂರ್ಣ ಪ್ರಮಾಣದಲ್ಲಿ ಅನುಷ್ಠಾನಗೊಂಡಿರೆ, 9 ನಿವೇಶನಗಳಲ್ಲಿ ಕಟ್ಟಡಗಳ ನಿರ್ಮಾಣ ಹಂತದಲ್ಲಿರುತ್ತವೆ. ಬಾಕಿ ಉಳಿದ 3 ನಿವೇಶನದಲ್ಲಿ ಯಾವುದೇ ಪ್ರಗತಿ ಕಂಡುಬOದಿರುವುದಿಲ್ಲ. ಈಗಾಗಲೇ 15 ಕ್ಕೂ ಹೆಚ್ಚು ಜನರು ನಿವೇಶನ ಕೋರುತ್ತಿದ್ದಾರೆ. ನಿವೇಶನ ಪಡೆದು ಕೈಗಾರಿಕಾ ಘಟಕ ಸ್ಥಾಪಿಸದೇ ಇರುವ ನಿವೇಶನಗಳ ಮರು ಹಂಚಿಕೆಗೆ ನಿಯಮಾನುಸಾರ ಕ್ರಮ ಕೈಗೊಳ್ಳಿ ಎಂದರು.
ಕೈಗಾರಿಕಾ ಪ್ರದೇಶಗಳಲ್ಲಿ ಅಗತ್ಯವಿರುವ ರಸ್ತೆ, ನೀರಿನ ವ್ಯವಸ್ಥೆ, ವಿದ್ಯುತ್ ಸಂಪರ್ಕ, ಒಳಚರಂಡಿ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕು ಎಂದ ಅವರು, ಜಿಲ್ಲೆಯಲ್ಗಿ ವಿವಿಧ ಕೈಗಾರಿಕಾ ಘಟಕಗಳಲ್ಲಿ484 ಹುದ್ದೆಗಳು ಖಾಲಿ ಇರುವುದು ಕಂಡುಬOದಿದೆ. ಖಾಲಿ ಹುದ್ದೆಗಳ ನೇಮಕಾತಿಗೆ ಸ್ಥಳೀಯ ಅಭ್ಯರ್ಥಿಗಳಿಗೆ ಅವಕಾಶ ಮಾಡಿಕೊಡಲು ಕಾರ್ಯಪ್ರವೃತ್ತರಾಗಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.