ಕೋಸ್ಟಲ್ ಟಾಕ್ ನ್ಯೂಸ್ | ಉಡುಪಿ
ಅಜ್ಜರಕಾಡಿನ ನೂತನ ಜಿಲ್ಲಾಸ್ಪತ್ರೆ ಕಟ್ಟಡದಲ್ಲಿ ಹಳೆಯ ಉಪಕರಣಗಳನ್ನು ಇರಿಸಿರುವುದನ್ನು ವಿರೋಧಿಸಿರುವ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಕುಮಾರ್ ಶೆಟ್ಟಿ ಬಣ), ಜಿಲ್ಲಾಡಳಿತದ ವಿರುದ್ಧ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ನೂತನ ಕಟ್ಟಡದಲ್ಲಿ ಪೂರ್ಣ ಸೌಲಭ್ಯಗಳೊಂದಿಗೆ ಆಸ್ಪತ್ರೆ ಕಾರ್ಯಾರಂಭಿಸಬೇಕು ಎಂದು ಸಂಘಟನೆ ಆಗ್ರಹಿಸಿದೆ.
ಸೋಮವಾರ ಉಡುಪಿ ಪ್ರೆಸ್ ಕ್ಲಬ್ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಂಘಟನೆಯ ಗೌರವಾಧ್ಯಕ್ಷ ಅನ್ಸಾರ್ ಅಹಮದ್, ಪ್ರತಿಭಟನೆಯ ಸಂದರ್ಭದಲ್ಲಿ ನವೆಂಬರ್ 5ರೊಳಗೆ ನೂತನ ಆಸ್ಪತ್ರೆ ಕಟ್ಟಡವನ್ನು ಉದ್ಘಾಟಿಸುವುದಾಗಿ ಜಿಲ್ಲಾಡಳಿತ ಭರವಸೆ ನೀಡಿತ್ತು ಎಂದು ತಿಳಿಸಿದರು.
ಆದರೆ, ತರಾತುರಿಯಲ್ಲಿ ಹಳೆಯ ಆಸ್ಪತ್ರೆಯಲ್ಲಿದ್ದ ಮಂಚಗಳು ಸೇರಿದಂತೆ ಇತರ ಉಪಕರಣಗಳನ್ನು ನೂತನ ಕಟ್ಟಡಕ್ಕೆ ಸ್ಥಳಾಂತರಿಸಲಾಗುತ್ತಿದೆ. ಇದು ತಮ್ಮ ಬೇಡಿಕೆಗೆ ವಿರುದ್ಧವಾಗಿದೆ ಎಂದು ಅವರು ಆಕ್ಷೇಪಿಸಿದರು. “ಇದು ಬಹುದಿನಗಳ ಬೇಡಿಕೆಯಾಗಿದೆ. ಜಿಲ್ಲಾಡಳಿತ ನಿರ್ಲಕ್ಷ್ಯ ತೋರಿದರೆ ಪ್ರತಿಭಟನೆ ನಡೆಸುತ್ತೇವೆ,” ಎಂದು ಎಚ್ಚರಿಕೆ ನೀಡಿದರು.
250 ಹಾಸಿಗೆಗಳ ಜಿಲ್ಲಾಸ್ಪತ್ರೆ ಕಟ್ಟಡಕ್ಕೆ 2021ರ ಆಗಸ್ಟ್ 12ರಂದು ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಂಕುಸ್ಥಾಪನೆ ನೆರವೇರಿಸಿದ್ದರು. 115 ಕೋಟಿ ರೂ. ಅಂದಾಜು ವೆಚ್ಚದ ಯೋಜನೆಗೆ 2020ರ ನವೆಂಬರ್ನಲ್ಲಿ ಆಡಳಿತಾತ್ಮಕ ಅನುಮೋದನೆ ದೊರೆತಿತ್ತು. ಹೈದರಾಬಾದ್ ಮೂಲದ ಕಂಪನಿಗೆ ಕಾಮಗಾರಿ ಗುತ್ತಿಗೆ ನೀಡಲಾಗಿದ್ದು, 2021ರ ಸೆಪ್ಟೆಂಬರ್ 8ರಂದು ಕಾರ್ಯಾದೇಶ ಹೊರಡಿಸಲಾಗಿತ್ತು.